ಬೆಳ್ತಂಗಡಿ : ದತ್ತ ಪೀಠದಲ್ಲಿ ಹಿಂದೂ ಅರ್ಚಕರನ್ನು ಪೂಜಾ ಕೈಂಕರ್ಯಕ್ಕೆ ನೇಮಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ದತ್ತಪೀಠದಲ್ಲಿ ಪೂಜಾ ಕೈಂಕರ್ಯಗಳು ನಡೆಯುವ ಬಗ್ಗೆ ಸಮುದಾಯದಲ್ಲಿ ಭಿನ್ನಾಭಿಪ್ರಾಯ ಮೂಡಿ ಈ ವಿಷಯ ಹೈಕೋರ್ಟ್ ಮೆಟ್ಟಿಲೇರಿತ್ತು.
2018ರ ಮಾ.19ರಂದು ರಾಜ್ಯ ಸರ್ಕಾರವು ಮುಜಾವರ್ ಅವರನ್ನು ಪೂಜಾ ಕೈಂಕರ್ಯಕ್ಕೆ ನೇಮಿಸಲು ಆದೇಶವನ್ನು ಹೊರಡಿಸಿತ್ತು. ಈ ಸಂದರ್ಭದಲ್ಲಿ ಹಿಂದೂ ಸಂಘಟನೆಯ ನೇೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆದಿತ್ತು. ಈ ಆದೇಶಶನ್ನುಪ್ರಶ್ನಿಸಿ ಶ್ರೀ ಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಕಾನೂನು ಹೋರಾಟ ನಡೆಸಿ ಈಗ ಯಶಸ್ವಿಯಾಗಿದೆ.
ಸರ್ಕಾರದ ಆದೇಶ ಪ್ರಶ್ನಿಸಿ ಶ್ರೀ ಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಸರ್ಕಾರದ ಆದೇಶವನ್ನು ರದ್ದುಪಡಿಸಿದೆ.
ವಿಶೇಷ ಸಮತಿಯ ವರದಿಯನ್ನು ಪರಿಗಣಿಸದೆ ಪ್ರಕರಣವನ್ನು ಹೊಸದಾಗಿ ಪರಿಶೀಲಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ ಇನ್ನು ಮುಂದೆ ದತ್ತ ಪೀಠದಲ್ಲಿ ಹಿಂದೂ ಅರ್ಚಕರನ್ನು ಪೂಜಾ ಕೈಂಕರ್ಯಕ್ಕೆ ನೇಮಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.